ಇನ್ನೊಂದು ಬಹಳ ಹಳೆಯ ಕವಿತೆ

ಅವಳು

avalu.jpg

ಚಂದವಿದ್ದಳು ಗೆಳೆಯ ಅವಳು

ಒಳ್ಳೆ ಮಜಬೂತು ಕುದುರೆ.

ಹಾರಂಗಿ ಅಣೆಕಟ್ಟು ಕಟ್ಟಿಟ್ಟ ನೀರು

ಬಿಟ್ಟಾಗ ನಗುವ ನಕ್ಷತ್ರ ಮೀನು.

ಅವಳು ಕೂದಲು ಬಿಚ್ಚಿಟ್ಟು ತುಟಿಯಲ್ಲಿ

ಕಚ್ಚಿ ಹೇರುಪಿನ್ನು, ನಗುವ ಹಾಗೆ

ಗಲ್ಲದಲ್ಲೊಂದು ಗುಳಿಯಿತ್ತು ಗೆಳೆಯ,

ತುಂಬು ಕೊರಳಿನ ತುಂಬ ಕಾಡು ಹಾಡು.

ಅವಳ ತಟ್ಟನೆಯ ತಿರುವು ತಿರುವುತ್ತ

ಹರಿವ ಕಪ್ಪು ಟಾರಿನ ದಾರಿ ತಗ್ಗು ಕೆಳಗೆ

ಅಲ್ಲಿ ಏಲಕ್ಕಿ ಮಲೆ ಕೆಂಪು ಕಾಫಿಯ ತೋಟ

ಹಸಿರು ಗಾಳಿಗೆ ಉಲಿವ ಬೇಲಿಯೊಳಗೆ

ಚೀಲ ಬುತ್ತಿಯ ತೋಳೆ ಬರಿ ಕಿತ್ತಳೆ.

Advertisements